-->
ಮಂಗಳೂರು: ಅಪ್ರಾಪ್ತ ಬಾಲಕಿ ಮೇಲೆ ನಿರಂತರ ಅತ್ಯಾಚಾರ ಎಸಗಿ ಗರ್ಭಿಣಿಯಾಗಲು ಕಾರಣನಾದ ಆರೋಪಿಗೆ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ, ದಂಡ

ಮಂಗಳೂರು: ಅಪ್ರಾಪ್ತ ಬಾಲಕಿ ಮೇಲೆ ನಿರಂತರ ಅತ್ಯಾಚಾರ ಎಸಗಿ ಗರ್ಭಿಣಿಯಾಗಲು ಕಾರಣನಾದ ಆರೋಪಿಗೆ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ, ದಂಡ

ಮಂಗಳೂರು: ಅಪ್ರಾಪ್ತ ಬಾಲಕಿಯ ಮೇಲೆ ನಿರಂತರವಾಗಿ ಅತ್ಯಾಚಾರ ನಡೆಸಿ ಗರ್ಭಿಣಿಯಾಗಿಸಿರುವ ಆರೋಪ ಮಂಗಳೂರಿನ ಹೆಚ್ಚುವರಿ ಸತ್ರ ನ್ಯಾಯಾಲಯ ಹಾಗೂ ತ್ವರಿತಗತಿ ವಿಶೇಷ ನ್ಯಾಯಾಲಯದಲ್ಲಿ ಸಾಬೀತುಗೊಂಡ ಹಿನ್ನೆಲೆಯಲ್ಲಿ ಆರೋಪಿ ರಾಜು ಯಾನೆ ರಾಜ (36) ಎಂಬಾತನಿಗೆ 10 ವರ್ಷಗಳ ಕಠಿಣ ಶಿಕ್ಷೆ ಮತ್ತು 16 ಸಾವಿರ ರೂ.ದಂಡ ವಿಧಿಸಿ ನ್ಯಾಯಾಧೀಶರು ಆದೇಶಿಸಿದ್ದಾರೆ.

ಆರೋಪಿ ರಾಜು ಯಾನೆ ರಾಜ ಸಂತ್ರಸ್ತ ಬಾಲಕಿಯ ಸಂಬಂಧಿಕನಾಗಿದ್ದು, ಆಕೆಯ ಕುಟುಂಬದೊಂದಿಗೆ ವಾಸಿಸುತ್ತಿದ್ದ. 2015 ರಲ್ಲಿ ಸಂತ್ರಸ್ತ ಬಾಲಕಿಯ ಕುಟುಂಬವು ಶಿವಮೊಗ್ಗದಿಂದ ಮಂಗಳೂರಿಗೆ ಬಂದು ಬಿಕರ್ನಕಟ್ಟೆ ಕೈಕಂಬದ ಬಳಿಯ ಮನೆಯಲ್ಲಿ ವಾಸವಾಗಿದ್ದರು. ಈ ಸಂದರ್ಭ ಆರೋಪಿ ರಾಜು ಸಂತ್ರಸ್ತ ಬಾಲಕಿ, ಆಕೆಯ ತಾಯಿ, ಸಹೋದರಿಯೊಂದಿಗೆ ಅದೇ ಮನೆಯಲ್ಲಿ ವಾಸಿಸುತ್ತಿದ್ದ.

2015 ಸಪ್ಟೆಂಬರ್ ನಲ್ಲಿ ಸಂತ್ರಸ್ತೆಯ ತಾಯಿ ಕೆಲಸಕ್ಕೆ ಹಾಗೂ ಆಕೆಯ ಸೋದರಿ ಶಾಲೆಗೆ ಹೋಗಿದ್ದರು. ಆಗ ಮನೆಯಲ್ಲಿ ಸಂತ್ರಸ್ತ ಬಾಲಕಿ ಮನೆಯಲ್ಲಿ ಓರ್ವಳೇ ಇದ್ದಳು. ಅಂದು ಮನೆಯಲ್ಲಿದ್ದ ಆರೋಪಿ ರಾಜು ಆಕೆಯೊಂದಿಗೆ ಬಲವಂತವಾಗಿ ಲೈಂಗಿಕ ಸಂಪರ್ಕ ಮಾಡಿದ್ದಾನೆ. ಆ ಬಳಿಕ ಬಾಲಕಿಯ ಇಚ್ಛೆಗೆ ವಿರುದ್ಧವಾಗಿ ನಿರಂತರವಾಗಿ ಅತ್ಯಾಚಾರ ಎಸಗಿದ್ದ ಎಂದು ಆರೋಪಿಸಲಾಗಿದೆ.

2015 ಡಿಸೆಂಬರ್‌ನಲ್ಲಿ ಸಂತ್ರಸ್ತ ಬಾಲಕಿಗೆ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಆಗ ಆಕೆಯ ತಾಯಿ ವೈದ್ಯಕೀಯ ಪರೀಕ್ಷೆಗೆ ಒಳ ಪಡಿಸಿದಾಗ ಗರ್ಭಿಣಿಯಾಗಿರುವುದು ಬಹಿರಂಗಗೊಂಡಿದೆ. ಈ ಹಿನ್ನೆಲೆಯಲ್ಲಿ ಆಕೆಯ ತಾಯಿ ಪಾಂಡೇಶ್ವರ ಮಹಿಳಾ ಪೊಲೀಸ್ ಠಾಣೆಯಲ್ಲಿ ಆರೋಪಿ ರಾಜು ವಿರುದ್ಧ ದೂರು ದಾಖಲಿಸಿದ್ದಾರೆ. ಪೊಲೀಸರು ಆರೋಪಿಯ ವಿರುದ್ಧ ಅತ್ಯಾಚಾರ ಆರೋಪದಡಿ ಪೊಕ್ಸೊ ಪ್ರಕರಣ ದಾಖಲಿಸಿ, ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದರು.

ಈ ಮಧ್ಯೆ ಬಾಲಕಿಗೆ ಗರ್ಭ ಪಾತವಾಗಿದೆ. ಆ ಸಂದರ್ಭ ನಡೆಸಿರುವ ಡಿಎನ್‌ಎ ಪರೀಕ್ಷೆಯಲ್ಲಿಯೂ ಬಾಲಕಿ ಗರ್ಭವತಿಯಾಗಲು ಆರೋಪಿ ರಾಜು ಕಾರಣ ಎಂದು ಸಾಬೀತಾಗಿತ್ತು. ಈ ಬಗ್ಗೆ ಮಹಿಳಾ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಕೆ. ಕಲಾವತಿ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಂಡ ಮಂಗಳೂರಿನ ಹೆಚ್ಚುವರಿ ಸತ್ರ ನ್ಯಾಯಾಲಯ ಹಾಗೂ ತ್ವರಿತಗತಿ ವಿಶೇಷ ನ್ಯಾಯಾಲಯ 10 ಮಂದಿ ಸಾಕ್ಷಿಗಳನ್ನು ವಿಚಾರಣೆಗೆ ಒಳ ಪಡಿಸಿ, 17 ದಾಖಲೆಗಳನ್ನು ಪರಿಶೀಲನೆ ನಡೆಸಿ, ಆರೋಪಿ ರಾಜು ತಪ್ಪಿತಸ್ಥನೆಂದು ತೀರ್ಮಾನಿಸಿದೆ. ಈ ಹಿನ್ನೆಲೆಯಲ್ಲಿ ಆರೋಪಿಗೆ ಐಪಿಸಿ ಸೆಕ್ಷನ್ 376 (ಅತ್ಯಾಚಾರ)ರ ಅನ್ವಯ ಏಳು ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 5,000 ರೂ. ದಂಡ ಹಾಗೂ ದಂಡ ತೆರಲು ತಪ್ಪಿದ್ದಲ್ಲಿ ಮತ್ತೆ 1 ವರ್ಷ ಕಠಿಣ ಕಾರಾಗೃಹ ಶಿಕ್ಷೆ, ಐಪಿಸಿ ಸೆಕ್ಷನ್ 506 (ಕೊಲೆ ಬೆದರಿಕೆ)ರ ಅನ್ವಯ 1 ವರ್ಷ ಕಠಿಣ ಶಿಕ್ಷೆ ಮತ್ತು 1,000 ರೂ. ದಂಡ ಹಾಗೂ ದಂಡ ತೆರಲು ತಪ್ಪಿದ್ದಲ್ಲಿ ಮತ್ತೆ ಹೆಚ್ಚುವರಿಯಾಗಿ 15 ದಿನ ಕಠಿಣ ಕಾರಾಗೃಹ ಶಿಕ್ಷೆ ಮತ್ತು ಪೊಕ್ಸೊ ಕಾಯ್ದೆಯ ಸೆಕ್ಷನ್ 6 ರನ್ವಯ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 10,000 ರೂ. ದಂಡ ಹಾಗೂ ದಂಡ ತೆರಲು ತಪ್ಪಿದ್ದಲ್ಲಿ ಮತ್ತೆ 2 ತಿಂಗಳ ಕಠಿಣ ಕಾರಾಗೃಹ ಶಿಕ್ಷೆ ಅನುಭವಿಸ ಬೇಕು. ಅಲ್ಲದೆ ಸಂತ್ರಸ್ತ ಬಾಲಕಿಗೆ ಸರಕಾರದಿಂದ 3 ಲಕ್ಷ ರೂ. ಪರಿಹಾರವನ್ನು ಒದಗಿಸಬೇಕು ಎಂದು ನ್ಯಾಯಾಧೀಶೆ ಸಾವಿತ್ರಿ ವಿ. ಭಟ್ ತೀರ್ಪು ನೀಡಿ ಆದೇಶಿಸಿದ್ದಾರೆ.


ಪ್ರಕರಣದಲ್ಲಿ ಸರಕಾರದ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ ಸಿ. ವೆಂಕಟರಮಣ ಸ್ವಾಮಿ ವಾದಿಸಿದ್ದರು.

Ads on article

Advertise in articles 1

advertising articles 2

Advertise under the article