ಕಾಲೇಜಿನಲ್ಲಿಯೇ ಎರಡನೇ ಮಹಡಿಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ: ತಲೆ - ಕಾಲಿಗೆ ಗಂಭೀರ ಗಾಯ
Wednesday, December 1, 2021
ಬೆಂಗಳೂರು: ವಿದ್ಯಾರ್ಥಿನಿಯೋರ್ವಳು ಕಾಲೇಜಿನಲ್ಲೇ ಎರಡನೇ ಮಹಡಿಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದು, ಕಾಲು ಹಾಗೂ ತಲೆಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಬೆಂಗಳೂರಿನ ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ಈ ವಿದ್ಯಾರ್ಥಿನಿ ವಿದ್ಯಾಭ್ಯಾಸ ಪೂರೈಸುತ್ತಿದ್ದು, ಬಿಎ ವ್ಯಾಸಂಗ ಮಾಡುತ್ತಿದ್ದಾಳೆ. ಆಕೆ ತನ್ನ ಅಕ್ಕನ ಮನೆಯಲ್ಲಿದ್ದುಕೊಂಡು ಕಾಲೇಜಿಗೆ ಬರುತ್ತಿದ್ದಳು. ನಿನ್ನೆ ಮನೆಯಲ್ಲಿ ಅಕ್ಕನ ಜತೆ ಜಗಳವಾಡಿಕೊಂಡಿದ್ದು, ಅದೇ ಬೇಸರದಿಂದ ಆತ್ಮಹತ್ಯೆಗೆ ಯತ್ನಿಸಿರಬಹುದು ಎಂದು ಶಂಕಿಸಲಾಗಿದೆ.
ಎರಡನೇ ಮಹಡಿಯಿಂದ ಆತ್ಮಹತ್ಯೆಗೆ ಯತ್ನಿಸಿರುವ ವಿದ್ಯಾರ್ಥಿನಿ ತಲೆ ಹಾಗೂ ಕಾಲುಗಳಿಗೆ ಗಂಭೀರ ಗಾಯಗಳಾಗಿದೆ. ಕಾಲೇಜು ಆಡಳಿತ ಮಂಡಳಿ ತಕ್ಷಣ ಆಕೆಯನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ದಾಖಲು ಮಾಡಿದ್ದಾರೆ. ಜೀವನ್ಬಿಮಾನಗರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.