ಉದ್ಯೋಗದ ಆಮಿಷವೊಡ್ಡಿ ಬಡ ಯುವತಿಯರನ್ನು ವೇಶ್ಯಾವಾಟಿಕೆ ದಂಧೆಗೆ ಬಳಸುತ್ತಿದ್ದ ಮೂವರು ಆರೋಪಿಗಳ ಬಂಧನ
Wednesday, February 9, 2022
ಬೆಂಗಳೂರು: ಉದ್ಯೋಗ ಕೊಡಿಸುವ ಆಮಿಷವೊಡ್ಡಿ ಹೊರ ರಾಜ್ಯಗಳಿಂದ ಯುವತಿಯರನ್ನು ಕರೆ ತಂದು ವೇಶ್ಯಾವಾಟಿಕೆ ದಂಧೆಗೆ ತಳ್ಳಿರುವ ಮೂವರು ಆರೋಪಿಗಳನ್ನು ಬಂಧಿಸಿರುವ ಆನೇಕಲ್ ಪೊಲೀಸರು ಯುವತಿಯರನ್ನು ರಕ್ಷಿಸಿದ್ದಾರೆ.
ಆನೇಕಲ್-ಚಂದಾಪುರ ಮುಖ್ಯರಸ್ತೆಯಲ್ಲಿರುವ ವಿಬಿಎಚ್ ಸಿ ಅಪಾರ್ಟ್‌ಮೆಂಟ್ ನಲ್ಲಿ ಮನೆಯನ್ನು ಆರೋಪಿಗಳು ಬಾಡಿಗೆ ಪಡೆದಿದ್ದರು. ಇವರು ಅಸ್ಸಾಂ ಸೇರಿದಂತೆ ಹೊರ ರಾಜ್ಯಗಳಿಂದ ಬಡ ಯುವತಿಯರನ್ನು ಟಾರ್ಗೆಟ್ ಮಾಡಿ ಕೆಲಸ ಕೊಡಿಸುವ ಆಮಿಷವೊಡ್ಡಿ ಕರೆತಂದು ವೇಶ್ಯಾವಾಟಿಕೆಗೆ ದಂಧೆಗೆ ತಳ್ಳುತ್ತಿದ್ದರು. ಆರೋಪಿಗಳು ಕೆಲ ವರ್ಷಗಳಿಂದ ಆನೇಕಲ್, ಚಂದಾಪುರ, ಹೆಬ್ಬಗೋಡಿ ಭಾಗಗಳಲ್ಲಿ ಮನೆ ಬಾಡಿಗೆ ಪಡೆದು ವೇಶ್ಯಾವಾಟಿಕೆ ನಡೆಸುತ್ತಿದ್ದರು ಎಂದು ತಿಳಿದು ಬಂದಿದೆ.
ಈ ಬಗ್ಗೆ ಖಚಿತ ಮಾಹಿತಿ ಪಡೆದ ಆನೇಕಲ್ ಉಪವಿಭಾಗದ ಡಿವೈಎಸ್ಪಿ ಮಲ್ಲೇಶ್ ನೇತೃತ್ವದ ತಂಡ ವಿಬಿಎಚ್ ಸಿ ಅಪಾರ್ಟ್‌ಮೆಂಟ್ ಮೇಲೆ ದಾಳಿ ನಡೆಸಿದ್ದಾರೆ. ಈ ಸಂದರ್ಭ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿ ಮೂವರು ಯುವತಿಯರನ್ನು ರಕ್ಷಿಸಿದ್ದಾರೆ. ವಶಕ್ಕೆ ಪಡೆದಿರುವ ಮೂವರನ್ನು ಸಾಂತ್ವನ ಕೇಂದ್ರಕ್ಕೆ ಕಳುಹಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆನೇಕಲ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆ ಮುಂದುವರಿದಿದೆ.