Police Recruitment- ಶೀಘ್ರದಲ್ಲೇ 2000 ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿ
ಶೀಘ್ರದಲ್ಲೇ 2000 ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿ
ರಾಜ್ಯ ಪೊಲೀಸ್ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ಇದ್ದು ಅದನ್ನು ನೀಗಿಸಲು ಶೀಘ್ರದಲ್ಲಿ 2000 ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಪೊಲೀಸ್ ಇಲಾಖೆ ಮುಂದಾಗಿದೆ.
ಕೆಲ ವಾರಗಳ ಹಿಂದಷ್ಟೇ ಪೊಲೀಸ್ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ಇರುವ ಹಿನ್ನೆಲೆಯಲ್ಲಿ 4000 ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗಿತ್ತು.
ಇದೀಗ ಇನ್ನಷ್ಟು ಸಿಬ್ಬಂದಿ ನೇಮಕಾತಿಗೆ ಇಲಾಖೆ ಸಜ್ಜಾಗುತ್ತಿದೆ. ಈ ಬಗ್ಗೆ ಮಾಹಿತಿ ನೀಡಿರುವ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಈ ನೇಮಕಾತಿಯು ಪೊಲೀಸ್ ಇಲಾಖೆಗೆ ಬಲ ತುಂಬಲಿದೆ. ಚುನಾವಣೆ ಸೇರಿದಂತೆ ಭದ್ರತೆ ಹಾಗೂ ಶಾಂತಿ-ಸುವ್ಯವಸ್ಥೆ ಕಾಪಾಡಲು ಪೊಲೀಸ್ ಸಿಬ್ಬಂದಿ ನೇಮಕಾತಿ ಅತ್ಯಂತ ಅಗತ್ಯವಾಗಿದೆ ಎಂದು ಹೇಳಿದ್ದಾರೆ
ಪಿಎಸ್ಐ ನೇಮಕಾತಿಯಲ್ಲಿ ನಡೆದಿರುವ ಅಕ್ರಮದ ಬಗ್ಗೆ ಮಾತನಾಡಿದ ಅವರು ತಪ್ಪಿತಸ್ಥರಿಗೆ ಮತ್ತೊಮ್ಮೆ ಪರೀಕ್ಷೆ ಬರೆಯಲು ಅವಕಾಶ ಇಲ್ಲ ಎಂದು ಹೇಳಿದ್ದಾರೆ.
ಈಗ ನಡೆದಿರುವ ನೇಮಕಾತಿ ಪರೀಕ್ಷೆಯ ಉತ್ತರ ಪತ್ರಿಕೆಯನ್ನು ಬಾರಿ ಮುನ್ನೆಚ್ಚರಿಕೆಯಿಂದ ಪರಿಶೀಲಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಯಾವುದೇ ರೀತಿಯ ಅಕ್ರಮ ನಡೆಯದಂತೆ ಪೊಲೀಸ್ ಇಲಾಖೆ ಮುನ್ನೆಚ್ಚರಿಕೆ ವಹಿಸಲಿದೆ ಹಾಗೂ ಈಗಾಗಲೇ ಅಕ್ರಮದಲ್ಲಿ ಪಾಲ್ಗೊಂಡವರಿಗೆ ಪರೀಕ್ಷೆ ಬರೆಯಲು ಅವಕಾಶ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ