ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತೆಯ ಅತ್ಯಾಚಾರಗೈದ ಅಪರಾಧಿಗೆ ಜೀವಾವಧಿ ಶಿಕ್ಷೆ, ದಂಡ
Saturday, April 9, 2022
ಬೆಂಗಳೂರು: ಪ್ರೀತಿಯ ನೆಪದಲ್ಲಿ ಮದುವೆ ಆಗುವ ಭರವಸೆ ನೀಡಿ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿರುವ ಅಪರಾಧಿಗೆ ಒಂದನೇ ತ್ವರಿತ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ ದಂಡ ವಿಧಿಸಿತೀರ್ಪು ನೀಡಿದೆ.
ಇಲೆಕ್ಟ್ರಾನಿಕ್ ಸಿಟಿಯ ವಿ. ಮಧು ಶಿಕ್ಷೆಗೊಳಗಾದ ಅಪರಾಧಿ. ಈತ ಅಪ್ರಾಪ್ತ ಬಾಲಕಿಯನ್ನು ಮದುವೆ ಆಗುವುದಾಗಿ ನಂಬಿಸಿ ತಮಿಳುನಾಡಿಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದ. ಈ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸರು, ಬಾಲಕಿಯನ್ನು ರಕ್ಷಣೆ ಮಾಡಿದ್ದರು. ಅಲ್ಲದೆ ವಿ.ಮಧುವನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದರು. ತನಿಖೆ ನಡೆಸಿ ಕೋರ್ಟ್‌ಗೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.
ವಾದ-ಪ್ರತಿವಾದವನ್ನು ಆಲಿಸಿದ ನ್ಯಾಯಾಧೀಶೆ ಕೆ.ಎನ್. ರೂಪಾ, ಆರೋಪಿ ಮಧು ಮೇಲಿನ ಆರೋಪ ಸಾಬೀತಾಗಿ ಆತ ಅಪರಾಧಿ ಎಂದು ಘೋಷಣೆ ಮಾಡಿ ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ. ಜತೆಗೆ 10 ಸಾವಿರ ರೂ. ದಂಡ ವಿಧಿಸಿ ಆದೇಶಿಸಿದ್ದಾರೆ. ಸರ್ಕಾರದ ಅಭಿಯೋಜಕಿ ಪಿ.ಕೃಷ್ಣವೇಣಿ ವಾದ ಮಂಡಿಸಿದ್ದರು.