
ಚಿತ್ರದುರ್ಗ: ಲೈಂಗಿಕ ದೌರ್ಜನ್ಯದ ಆರೋಪಿ ಮುರುಘಾಶ್ರೀ ಅರೆಸ್ಟ್!
Friday, September 2, 2022
ಚಿತ್ರದುರ್ಗ: ಮಠದ ವಿದ್ಯಾರ್ಥಿಯರಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪವನ್ನು ಎದುರಿಸುತ್ತಿರುವ ಚಿತ್ರದುರ್ಗ ಮುರುಘಾ ಮಠದ ಡಾ.ಶ್ರೀ ಶಿವಮೂರ್ತಿ ಶರಣರನ್ನು ಗುರುವಾರ ರಾತ್ರಿ ಚಿತ್ರದುರ್ಗ ಪೊಲೀಸರು ಬಂಧಿಸಿದ್ದಾರೆ.
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಾಗಿರುವ ಆರು ದಿನಗಳ ಬಳಿಕ ಮುರುಘಾ ಮಠದ ಶ್ರೀಗಳನ್ನು ಹಿರಿಯ ಪೊಲೀಸ್ ಅಧಿಕಾರಿಗಳು ಮಠದಲ್ಲಿಯೇ ಬಂಧಿಸಿ ಬಿಗಿ ಭದ್ರತೆಯಲ್ಲಿ ಕರೆದೊಯ್ದಿದ್ದಾರೆ. ಇಂದು ಅವರನ್ನು ನ್ಯಾಯಾಧೀಶರ ಎದುರು ಹಾಜರುಪಡಿಸುವ ಸಾಧ್ಯತೆಯಿದೆ. ಬಂಧನದ ಭೀತಿಯಲ್ಲಿ ತೆರೆಮರೆಯಲ್ಲಿಯೇ ನಿರೀಕ್ಷಣಾ ಜಾಮೀನು ಕೋರಿ ಮುರುಘಾ ಶರಣರು ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಗುರುವಾರ ಕೈಗೆತ್ತಿಕೊಂಡಿದ್ದ ನ್ಯಾಯಾಲಯ ಅದನ್ನು ಶುಕ್ರವಾರಕ್ಕೆ ಮುಂದೂಡಿತ್ತು. ಪ್ರಕರಣದ ಎರಡನೇ ಆರೋಪಿಯಾಗಿರುವ ವಾರ್ಡನ್ ರನ್ನು ಗುರುವಾರ ಪೊಲಿಸರು ವಶಕ್ಕೆ ಪಡೆದಿದ್ದರು. ಆದರೆ ನಿನ್ನೆ ರಾತ್ರಿ ಸ್ವಾಮೀಜಿಯವರ ಬಂಧನವಾಗಿದೆ .
ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಮುರುಘಾ ಮಠ ಸೇರಿದಂತೆ ಚಿತ್ರದುರ್ಗ, ದಾವಣಗೆರೆ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಿದ್ದಾರೆ. ಸ್ವಾಮೀಜಿಯವರ ಬಂಧನಕ್ಕೆ ಆಗ್ರಹಿಸಿ ರಾಜ್ಯಾದ್ಯಂತ ಪ್ರತಿಭಟನೆಗಳು ನಡೆದಿದ್ದವು. ಮಠದ ಅಭಿಮಾನಿಗಳು ಸಭೆ ನಡೆಸಿ ಸ್ವಾಮೀಜಿಗೆ ನೈತಿಕ ಬೆಂಬಲ ವ್ಯಕ್ತಪಡಿಸಿದ್ದರು.