ಬೆಳ್ಳಂಬೆಳಗ್ಗೆ 25 ಅಡಿ ಆಳದ ಪ್ರಪಾತಕ್ಕೆ ಬಿದ್ದ ಕಾರು: ದಂಪತಿ ಸ್ಥಳದಲ್ಲಿಯೇ ದಾರುಣ ಸಾವು
ಕೋಲಾರ: ಇಂದು ಬೆಳ್ಳಂಬೆಳಗ್ಗೆ ಸಂಭವಿಸಿರುವ ಭೀಕರ ರಸ್ತೆ ಅಪಘಾತವೊಂದರಲ್ಲಿ ಆಂಧ್ರಪ್ರದೇಶ ಮೂಲದ ದಂಪತಿ ದಾರುಣವಾಗಿ ಮೃತಪಟ್ಟಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಲಕ್ಷ್ಮೀಪುರ ಕ್ರಾಸ್‌ನಲ್ಲಿ ನಡೆದಿದೆ.
ಆಂಧ್ರಪ್ರದೇಶದ ಮದನಪಲ್ಲಿ ನಿವಾಸಿಗಳಾದ ಶಫಿ (55) ಹಾಗೂ ಶಾಮಾ (50) ಮೃತಪಟ್ಟ ದಂಪತಿ. ಇವರು ಕಾರಿನಲ್ಲಿ ಬೆಂಗಳೂರಿನಿಂದ ಮದನಪಲ್ಲಿಗೆ ತೆರಳುತ್ತಿದ್ದರು. ಆದರೆ ಶ್ರೀನಿವಾಸಪುರದ ಲಕ್ಷ್ಮೀಪುರ ಕ್ರಾಸ್‌ನಲ್ಲಿ ರಸ್ತೆಯ ಬಲಬದಿಯಲ್ಲಿ ಇವರು ಚಲಾಯಿಸುತ್ತಿದ್ದ ಕಾರು 20 ರಿಂದ 25 ಅಡಿ ಹಳ್ಳಕ್ಕೆ ಬಿದ್ದಿದೆ. ಪರಿಣಾಮ ದಂಪತಿ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮಾಹಿತಿ ತಿಳಿದು ಘಟನಾ ಸ್ಥಳಕ್ಕೆ ಆಗಮಿಸಿದ ಗೌನಿಪಲ್ಲಿ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅತಿಯಾದ ವೇಗವೇ ಅಪಘಾತಕ್ಕೆ ಕಾರಣ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಕ್ರೇನ್ ಸಹಾಯದಿಂದ ಕಾರನ್ನು ಮೇಲಕ್ಕೆತ್ತಿ ಮೃತ ದೇಹಗಳನ್ನು ಶ್ರೀನಿವಾಸಪುರದ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ವಿದೇಶಕ್ಕೆ ಹೋಗುತ್ತಿದ್ದ ಪುತ್ರಿಯನ್ನು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಿಟ್ಟು ಇವರು ಅಂಧ್ರಪ್ರದೇಶದ ಮದನಪಲ್ಲಿಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಮರಣೋತ್ತರ ಪರೀಕ್ಷೆಯ ಬಳಿಕ ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರ ಮಾಡಲಾಗುವುದು ಎಂದು ಗೌನಿಪಲ್ಲಿ ಪೊಲೀಸರು ತಿಳಿಸಿದ್ದಾರೆ.