ಪುತ್ರಿಯನ್ನು ಹೆಗಲ ಮೇಲೆ ಕೂರಿಸಿಕೊಂಡು ರಸ್ತೆಯಲ್ಲಿ ಸಂಚರಿಸುತ್ತಿದ್ದಾನ ಮೇಲೆ ಗುಂಡು ಹಾರಿಸಿದ ದುಷ್ಕರ್ಮಿಗಳು
Monday, August 14, 2023
ಲಕ್ನೋ: ತನ್ನ ಪುತ್ರಿಯನ್ನು ಭುಜದ ಮೇಲೆ ಕೂರಿಸಿಕೊಂಡು ಹೋಗುತ್ತಿದ್ದ ಯುವಕನಿಗೆ ದುಷ್ಕರ್ಮಿಗಳು ಗುಂಡು ಹಾರಿಸಿ ಪರಾರಿಯಾಗಿರುವ ಘಟನೆ ಉತ್ತರಪ್ರದೇಶದ ಶಹಜಹನ್ಪುರ ಜಿಲ್ಲೆಯಲ್ಲಿ ನಡೆದಿದೆ.
ಮೊಹಮ್ಮದ್ ಶೋಯೆಬ್(28) ಗುಂಡೇಟು ತಿಂದು ಗಂಭಿರವಾಗಿ ಗಾಯಗೊಂಡ ಯುವಕ. ಆತನ ಸ್ಥಿತಿ ಚಿಂತಾಕಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತು ವಿಪಕ್ಷ ನಾಯಕರು ಕಿಡಿಕಾರುತ್ತಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವೀಡಿಯೋದಲ್ಲಿ ಮೊಹಮ್ಮದ್ ಶೋಯೆಬ್ ತನ್ನ ಪುತ್ರಿಯನ್ನು ಹೆಗಲ ಮೇಲೆ ಕೂರಿಸಿಕೊಂಡು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದನಜ. ಈ ವೇಳೆ ಬೈಕಿನಲ್ಲಿ ಬಂದ ಮೂವರು ದುಷ್ಕರ್ಮಿಗಳು ಏಕಾಏಕಿ ಆತನ ಮೇಲೆ ಗುಂಡು ಹಾರಿಸಿದ್ದಾರೆ. ಬಳಿಕ ಬೈಕ್ ನಲ್ಲಿ ಕುಳಿತು ಪರಾರಿಯಾಗಿದ್ದಾರೆ. ಗುಂಡಿನ ಸದ್ದು ಕೇಳಿ ಸ್ಥಳಕ್ಕೆ ದೌಡಾಯಿಸಿದ ಸ್ಥಳೀಯರು ಗಂಭೀರವಾಗಿ ಗಾಯಗೊಂಡಿದ್ದ ಶೋಯೆಬ್ ಹಾಗೂ ಮಗುವನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಘಟನೆ ಕುರಿತು ಪ್ರತಿಕ್ರಿಯಿಸಿರುವ ಶಹಜಹನ್ಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಮೀನಾ ಲಭ್ಯವಾಗಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದ್ದು, ಆರೋಪಿಗಳನ್ನು ಪತ್ತೆಹಚ್ಚುವ ಕಾರ್ಯದಲ್ಲಿ ಅಧಿಕಾರಿಗಳು ನಿರತರಾಗಿದ್ದಾರೆ. ತಪ್ಪಿತಸ್ಥರನ್ನು ಶೀಘ್ರದಲ್ಲೇ ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಮೀನಾ ತಿಳಿಸಿದ್ದಾರೆ.