MANGALORE CCB ಕಾರ್ಯಾಚರಣೆ: MDMA ಮಾರಾಟ ಮಾಡುತ್ತಿದ್ದ 4 ಆರೋಪಿಗಳ ಸೆರೆ
Wednesday, August 16, 2023
ಮಂಗಳೂರು: ಮಂಗಳೂರು ಉತ್ತರ ಪೊಲೀಸ್ ಠಾಣೆ ಹಾಗೂ ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆಸಿದ 2 ಪ್ರತ್ಯೇಕ ಕಾರ್ಯಾಚರಣೆಯಲ್ಲಿ ನಗರದಾದ್ಯಂತ ಮಾದಕ ವಸ್ತುವಾದ MDMA ನ್ನು ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದ್ದು, ಬಂಧಿತರಿಂದ ಒಟ್ಟು 200 ಗ್ರಾಂ ಎಂಡಿಎಂಎ ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ.
ಮೊದಲ ಪ್ರಕರಣದಲ್ಲಿ ಬೆಂಗಳೂರಿನಿಂದ MDMA ಮಾದಕ ವಸ್ತುವನ್ನು ಖರೀದಿಸಿಕೊಂಡು ಮಂಗಳೂರು ನಗರದ ಉತ್ತರ ಠಾಣಾ ವ್ಯಾಪ್ತಿಯ ಫಳ್ನೀರ್ ಪರಿಸರದಲ್ಲಿ ಕಾರಿನಲ್ಲಿ ಮೂವರು ವ್ಯಕ್ತಿಗಳು ಸೇರಿಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಘಟಕದ ಎಸಿಪಿಯವರಾದ ಪಿ ಎ ಹೆಗಡೆ ರವರ ನೇತೃತ್ವದ CCB ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿದ್ದಾರೆ.
ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಉದ್ಯಾವರ ಮಂಜೇಶ್ವರದ ಮೊಹಮ್ಮದ್ ಹನೀಫ್ ಎ.ಎನ್(47),ಸಿರಾಜುದ್ದೀನ್ ಅಬ್ಬೂಬಕ್ಕರ್(35) ಸೈಯದ್ ಫೌಜಾನ್(30), ಬಂಧಿತರು.
ಮೂರು ಮಂದಿಯನ್ನು ಬಂಧಿಸಿ ಅವರ ವಶದಿಂದ ಒಟ್ಟು 100 ಗ್ರಾಂ ತೂಕದ ರೂ. 5 ಲಕ್ಷ ಮೌಲ್ಯದ ಎಂಡಿಎಂಎ ಮಾದಕ ವಸ್ತು, ನಗದು ರೂ. 4 ಸಾವಿರ , ಮಾರುತಿ ಸ್ವಿಫ್ಟ್ ಕಾರು, ಮೊಬೈಲ್ ಫೋನುಗಳು-3, ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ರೂ 10,94,500/-ಆಗಬಹುದು ಎಂದು ಅಂದಾಜಿಸಲಾಗಿದೆ. ಆರೋಪಿಗಳ ವಿರುದ್ಧ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಎರಡನೇ ಪ್ರಕರಣ ದಲ್ಲಿ ಮಂಗಳೂರು ನಗರದ ಅಳಪೆ ಗ್ರಾಮದ ಕಂಕನಾಡಿ ರೈಲ್ವೆ ಸ್ಟೇಷನ್ ರಸ್ತೆಯಲ್ಲಿ ವ್ಯಕ್ತಿಯೊಬ್ಬನು ಅಕ್ರಮವಾಗಿ ಮಾದಕ ವಸ್ತುವಾದ MDMA ನ್ನು ವಶದಲ್ಲಿರಿಸಿಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು CCB ಪೊಲೀಸರು ದಾಳಿ ನಡೆಸಿ ಓರ್ವನನ್ನು ಬಂಧಿಸಿದ್ದಾರೆ.
ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ಇಬ್ರಾಹಿಂ ಅರ್ಷಾದ್ ವಿ.ಕೆ(30) ಬಂಧಿತ ಆರೋಪಿ. ಈತನನ್ನು ವಶಕ್ಕೆ ಪಡೆದುಕೊಂಡು ಒಟ್ಟು 100 ಗ್ರಾಂ ತೂಕದ ರೂ. 5 ಲಕ್ಷ ಮೌಲ್ಯದ ಎಂಡಿಎಂಎ ಮಾದಕ ವಸ್ತು, ನಗದು ರೂ. 1000/-, ಮೊಬೈಲ್ ಫೋನುಗಳು-1, ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ರೂ 5,11,500/-ಆಗಬಹುದು ಎಂದು ಅಂದಾಜಿಸಲಾಗಿದೆ. ಆರೋಪಿಯ ವಿರುದ್ಧ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದಡ.
ಈ ಮಾದಕ ವಸ್ತು ಮಾರಾಟ ಜಾಲದ ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಅವರ ಪತ್ತೆ ಕಾರ್ಯ ಮುಂದುವರಿದಿದೆ.
ಆರೋಪಿ ಇಬ್ರಾಹೀಂ ಹರ್ಷಾದ್ ಎಂಬಾತನ ವಿರುದ್ಧ ಈ ಹಿಂದೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ 175 ಕೆಜಿ ಗಾಂಜಾ ಸಾಗಾಟಕ್ಕೆ ಸಂಬಂಧಪಟ್ಟಂತೆ ಪ್ರಕರಣ ದಾಖಲಾಗಿರುತ್ತದೆ. ಅಲ್ಲದೇ ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಎರಡು ಹಲ್ಲೆ ಪ್ರಕರಣಗಳು ಹಾಗೂ ಕುಂಬಳೆ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣ ದಾಖಲಾಗಿರುತ್ತದೆ.
ಈ ಮಾದಕ ವಸ್ತು ಮಾರಾಟ ಜಾಲದ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಎಸಿಪಿ ಪಿ ಎ ಹೆಗಡೆ, ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐ ಯವರಾದ ನರೇಂದ್ರ, ಶರಣಪ್ಪ ಭಂಡಾರಿ, ಸುದೀಪ್ ಎಂ ವಿ, ಎಎಸ್ಐ ಮೋಹನ್ ಕೆ ವಿ ಹಾಗೂ ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು.