ಮಂಗಳೂರು: ವಿಮಾನ ನಿಲ್ದಾಣದಲ್ಲಿ ಅಕ್ರಮ ಸಾಗಾಟದ 14.50 ಲಕ್ಷ ಮೌಲ್ಯದ ಚಿನ್ನ ವಶಕ್ಕೆ
Tuesday, September 12, 2023
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನೊಬ್ಬ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 14.50 ಲಕ್ಷ ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಮಂಗಳವಾರ ಏರ್ ಇಂಡಿಯಾ ವಿಮಾನದಲ್ಲಿ ದುಬೈನಿಂದ ಆಗಮಿಸಿದ ಈ ಪ್ರಯಾಣಿಕ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದಾನೆ. ಆತನನ್ನು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ. ಈ ವೇಳೆ ನಾಲ್ಕು ರಟ್ಟಿನ ಪೆಟ್ಟಿಗೆಯ ಒಳಭಾಗದಲ್ಲಿ ಇರಿಸಲಾಗಿದ್ದ ನಾಲ್ಕು ನೀಲಿ ಬಣ್ಣದ ಕಾರ್ಬನ್ ನ ದಪ್ಪದ ಕಾಗದದ ಹಾಳೆಗಳ ಎರಡು ಪದರಗಳ ನಡುವೆ ಬಚ್ಚಿಟ್ಟು ಚಿನ್ನ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ. ತಕ್ಷಣ ಕಸ್ಟಮ್ಸ್ ಅಧಿಕಾರಿಗಳು ಆತನನ್ನು ವಶಕ್ಕೆ ತೆಗೆದುಕೊಂಡು 242 ಗ್ರಾಂ ಚಿನ್ನದ ಪುಡಿಯನ್ನು ವಶಪಡಿಸಿಕೊಂಡಿದ್ದಾರೆ. ಇದರ ಮೌಲ್ಯ 14.50 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.