ದಕ್ಷಿಣ ಕನ್ನಡದಲ್ಲಿ ಮತ್ತೆ ಎರಡು ಕೊರೊನಾ ಪಾಸಿಟಿವ್ ದೃಢ- ಓರ್ವ ಗಂಭೀರ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಎರಡು ಕೊರೊನಾ ಪ್ರಕರಣಗಳು ದೃಢಪಟ್ಟಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ಡಾ ಎಚ್ ಆರ್ ತಿಮ್ಮಯ್ಯ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಒಂದು ಕೊರೊನ ಪ್ರಕರಣ ದೃಢವಾಗಿತ್ತು. ಉಡುಪಿ ಜಿಲ್ಲೆಯ ವೃದ್ದರೊಬ್ಬರು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಲ್ಲಿ ಕೊರೊನ ಪಾಸಿಟಿವ್ ಪತ್ತೆಯಾಗಿತ್ತು. ಇಂದು ಮತ್ತೆ ಎರಡು ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪತ್ತೆಯಾದ ಕೊರೊನಾ ಪಾಸಿಟಿವ್ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.
ಸುಳ್ಯದ 83 ವರ್ಷದ ಮಹಿಳೆಯೊಬ್ಬರು ಚಿಕಿತ್ಸೆಗೆ ದಾಖಲಾಗಿದ್ದ ವೇಳೆ ಕೊರೊನಾ ಪರೀಕ್ಷೆಗೆ ಒಳಪಡಿಸಿದ್ದು, ಅವರಲ್ಲಿ ಪಾಸಿಟಿವ್ ಕಾಣಿಸಿಕೊಂಡಿದೆ. ಅವರು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.ಅವರನ್ನು ಮನೆಯಲ್ಲಿ ಪ್ರತ್ಯೇಕವಾಗಿ ಇರಿಸಲಾಗಿದೆ. ಇನ್ನು ಉತ್ತರ ಭಾರತದ 40 ವರ್ಷದ ಕೂಲಿ ಕಾರ್ಮಿಕ ಉಸಿರಾಟದ ತೊಂದರೆಯಿಂದ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದು, ಅವರಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.