ಸಾಗರ: ವಿವಾಹವಾಗುವುದಾಗಿ ಯುವತಿಯೊಂದಿಗೆ ದೈಹಿಕ ಸಂಬಂಧ ಬೆಳೆಸಿ ವಂಚನೆ - ಬಿಜೆಪಿ ಮುಖಂಡ ಅರುಣ್ ಕುಗ್ವೆ ಅರೆಸ್ಟ್
Sunday, June 23, 2024
ಸಾಗರ : ಯುವತಿಯೊಬ್ಬಳನ್ನು ವಿವಾಹವಾಗುಗುವುದಾಗಿ ನಂಬಿಸಿ 4ವರ್ಷಗಳಿಂದ ದೈಹಿಕ ಸಂಬಂಧ ಬೆಳೆಸಿ, ಲೈಂಗಿಕ ದೌರ್ಜನ್ಯವೆಸಗಿದ್ದಲ್ಲದೆ ಕುಟುಂಬಕ್ಕೆ ಜೀವ ಬೆದರಿಕೆ ಒಡ್ಡಿರುವ ಪ್ರಕರಣದಲ್ಲಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಅರುಣ್ ಕುಗ್ವೆ ಎಂಬಾತನನ್ನು ಪೊಲೀಸರು ರವಿವಾರ ಬಂಧಿಸಿರುವುದಾಗಿ ವರದಿಯಾಗಿದೆ.
ಸಂತ್ರಸ್ತ ಯುವತಿಯು ಶಿವಮೊಗ್ಗ ನಗರದ ಮಹಿಳಾ ಠಾಣೆಯಲ್ಲಿ ದಾಖಲಿಸಿದ್ದಳು. ಈ ದೂರಿನನ್ವಯ ಪ್ರಕರಣ ದಾಖಲಿಸಿಕೊಂಡು ಅರುಣ್ ಕುಗ್ವೆಯನ್ನು ಪೊಲೀಸರು ಬಂಧಿಸಿ ಎಫ್‌ಐಆರ್ ದಾಖಲಾಗಿದೆ.
ಮಾಜಿ ಸಚಿವ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಎಚ್.ಹಾಲಪ್ಪ ಹರತಾಳು ಅವರ ನಿಕಟವರ್ತಿ ಎನ್ನಲಾಗಿರುವ ಅರುಣ್ ಕುಗ್ವೆಗೆ ಯುವತಿ ಕಾಲೇಜಿನಲ್ಲಿ ಓದುತ್ತಿದ್ದ ವೇಳೆ ಪರಿಚಯವಾಗಿತ್ತು. ಬಳಿಕ ಈ ಸ್ನೇಹ ಪ್ರೀತಿಗೆ ತಿರುಗಿದೆ. ಈ ಹಿನ್ನೆಲೆಯಲ್ಲಿ ಎರಡೂ ಮನೆಗಳಿಗೆ ಸಂಬಂಧ ಒಪ್ಪಿಗೆಯಾಗಿದೆ. ಉದ್ಯಮಿ ಮತ್ತು ರಾಜಕಾರಣಿ ಎಂದು ಹೇಳಿಕೊಂಡಿದ್ದ ಅರುಣ್ ಮುಂದೆ ವಿವಾಹವಾಗುವ ಹುಸಿ ಭರವಸೆ ನೀಡಿ ಜೋಗ, ಸಾಗರ, ಶಿವಮೊಗ್ಗ ಮತ್ತಿತರ ಕಡೆಗಳಲ್ಲಿ ತನ್ನೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ್ದಾನೆ. ತಾವಿಬ್ಬರೂ ದೈಹಿಕ ಸಂಪರ್ಕ ಮಾಡಿದಾಗ ಬಲಾತ್ಕಾರವಾಗಿ ವಿಡಿಯೋ ಚಿತ್ರೀಕರಣ, ಫೋಟೋ ತೆಗೆದುಕೊಂಡಿದ್ದಾನೆ ಎಂದು ಯುವತಿ ದೂರಿನಲ್ಲಿ ವಿವರಿಸಿದ್ದಾರೆ.
ಇದೋಗ ಆತನಿಗೆ ಬೇರೆ ಹುಡುಗಿಯರೊಂದಿಗೆ ಸಂಬಂಧ ಹೊಂದಿರುವ ಮಾಹಿತಿಯಿದ್ದು, ಇದರ ಬಗ್ಗೆ ವಿಚಾರಿಸಿದರೆ ನನಗೆ ಜೀವ ಬೆದರಿಕೆ ಒಡ್ಡಿದ್ದಾರೆ. ಈಗ ಬೇರೊಬ್ಬ ಯುವತಿಯೊಂದಿಗೆ ಮದುವೆ ನಿಶ್ಚಯ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಪ್ರಶ್ನಿಸಿದ್ದಕ್ಕೆ ಅರುಣ್ ಹಾಗೂ ಆತನ ಸೋದರ ಗಣೇಶ್ ಎಂಬಾತ ತನಗೆ ಹಾಗೂ ತನ್ನ ಕುಟುಂಬದವರಿಗೆ ಜೀವ ಬೆದರಿಕೆ ಒಡ್ಡಿರುತ್ತಾನೆ ಎಂದು ಯುವತಿ ದೂರಿದ್ದಾರೆ.
ಈ ಹಿನ್ನೆಲೆಯಲ್ಲಿ ಅರುಣ್ ಕುಗ್ವೆ ಮತ್ತು ಗಣೇಶ್ ಇಬ್ಬರ ಮೇಲೆ ಐಪಿಸಿ ಸೆಕ್ಷನ್ 354, 376 ಹಾಗೂ 506 ಅಡಿಯಲ್ಲಿ ಪ್ರಕರಣ ದಾಖಲಿಸಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಅರುಣ್ ಕುಗ್ವೆ ಮೇಲೆ ಈಗಾಗಲೇ ಹಲವಾರು ಪ್ರಕರಣಗಳು ದಾಖಲಾಗಿದ್ದು, ಗಡಿಪಾರು ಸೂಚನೆಯನ್ನೂ ಹಿಂದೆ ನೀಡಲಾಗಿದ್ದ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣದ ಗಂಭೀರತೆಯನ್ನು ಆಧರಿಸಿ ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ ಎನ್ನಲಾಗಿದೆ. ಅರುಣ್ ಕುಗ್ವೆ ಜೊತೆಯಲ್ಲಿ ಎರಡನೇ ಆರೋಪಿಯಾಗಿ ಆತನ ಸೋದರ ಗಣೇಶ್ ಮೇಲೂ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.