ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಪ್ರಕರಣ: ಮಾಜಿ ಸಚಿವ ಬಿ.ನಾಗೇಂದ್ರರ ಪತ್ನಿ ಇಡಿ ಬಲೆಗೆ
Wednesday, July 17, 2024
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದು, ಮಾಜಿ ಸಚಿವ ಬಿ.ನಾಗೇಂದ್ರರ ಪತ್ನಿ ಮಂಜುಳಾರನ್ನು ಬುಧವಾರ ವಶಕ್ಕೆ ಪಡೆದಿದ್ದಾರೆ.
ನಗರದ ಡಾಲರ್ಸ್ ಕಾಲನಿಯ ನಿವಾಸದಲ್ಲಿ ಮಂಜುಳಾರನ್ನು ವಶಕ್ಕೆ ಪಡೆದಿರುವ ಅಧಿಕಾರಿಗಳು, ಶಾಂತಿನಗರದ ಕಚೇರಿಗೆ ಕರೆದೊಯ್ದು ವಿಚಾರಣೆ ಕೈಗೊಂಡಿರುವುದಾಗಿ ತಿಳಿದು ಬಂದಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಕೋಟ್ಯಂತರ ರೂ. ಅಕ್ರಮ ವ್ಯವಹಾರದಲ್ಲಿ ಹಲವಾರು ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆಯಾಗಿದೆ. ಈಗಾಗಲೇ ಬಂಧನವಾಗಿರುವ ಬಿ.ನಾಗೇಂದ್ರ ಅವರ ಬ್ಯಾಂಕ್ ಖಾತೆಯೊಂದಿಗೆ ಕುಟುಂಬಸ್ಥರ ಬ್ಯಾಂಕ್ ಖಾತೆಯನ್ನು ಪರಿಶೀಲಿಸಿದಾಗ ಪತ್ನಿಯ ಖಾತೆಯಿಂದ ಹೆಚ್ಚು ಹಣ ವರ್ಗಾವಣೆಯಾಗಿರುವ ವಿಚಾರ ಬೆಳಕಿಗೆ ಬಂದಿದೆ. ಈ ಕಾರಣಕ್ಕೆ ಇಡಿ ಅಧಿಕಾರಿಗಳು ಮಂಜುಳಾ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿರುವುದಾಗಿ ಮೂಲಗಳಿಂದ ತಿಳಿದು ಬಂದಿದೆ.