ಇಂದು-ನಾಳೆ ರಾಜ್ಯದ ಹಲವೆಡೆ ಭಾರೀ ಮಳೆಯ ಸಾಧ್ಯತೆ : ದ.ಕ., ಉಡುಪಿ ಸೇರಿದಂತೆ ನಾಲ್ಕು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ
Sunday, July 14, 2024
ಬೆಂಗಳೂರು: ರಾಜ್ಯದ ಹಲವೆಡೆ ರವಿವಾರ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹಮಾವಾನ ಇಲಾಖೆ ಮುನ್ಸೂಚನೆ ನೀಡಿದೆ. ಅದರಂತೆ ವಿವಿಧ ಜಿಲ್ಲೆಗಳಿಗೆ ರೆಡ್, ಆರೆಂಜ್, ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಜನರು ಜಾಗ್ರತೆ ವಹಿಸಬೇಕೆಂದು ಸೂಚಿಸಲಾಗಿದೆ.
ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದ್ದು, ಇಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಹಾಸನ ಹಾಗೂ ಕೊಡಗು ಜಿಲ್ಲೆಯಲ್ಲೂ ಅಧಿಕ ಮಳೆಯಾಗುವ ಸಾಧ್ಯತೆಯಿದ್ದು, ಮುಂಜಾಗ್ರತ ಕ್ರಮವಾಗಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಉಳಿದಂತೆ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಬೆಳಗಾವಿ, ಧಾರವಾಡ, ಹಾವೇರಿ, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿಯೂ ಭಾರಿ ಮಳೆಯ ಜತೆಗೆ 40ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಂಭವವಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.
ಸೋಮವಾರವೂ ಕೆಲವೆಡೆ ಧಾರಾಕಾರ ಮಳೆಯಾಗುವ ಸಾಧ್ಯತೆಯಿದ್ದು, ಕರಾವಳಿಯ ಮೂರು ಜಿಲ್ಲೆಗಳು ಸೇರಿ ಐದು ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಲಾಗಿದೆ. ಇದೇ 17ರವರೆಗೂ ಕರಾವಳಿ ಸೇರಿ ರಾಜ್ಯದ ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.