ಸಹಪಾಠಿ ಬಾಲಕನಿಂದ ಚೂರಿ ಇರಿತಕ್ಕೊಳಗಾದ ಬಾಲಕ ನಾಲ್ಕು ದಿನಗಳ ಜೀವನ್ಮರಣ ಹೋರಾಟದ ಬಳಿಕ ಸಾವು
Tuesday, August 20, 2024
ಉದಯ್‌ಪುರ: ಮುಸ್ಲಿಂ ಸಹಪಾಠಿಯಿಂದ ಇರಿತಗೊಂಡು ಗಂಭೀರವಾಗಿ ಗಾಯಗೊಂಡ ವಿದ್ಯಾರ್ಥಿ ಸೋಮವಾರ ಚಿಕಿತ್ಸೆ ಫಲಕಾರಿಯಾಗದೆ ಅಸುನೀಗಿದ್ದಾನೆ.
ದೇವರಾಜ್ (15) ಮೃತಪಟ್ಟ ಬಾಲಕ. ದೇವರಾಜ್ ಮೃತಪಡುವ ಮೊದಲು ಸಹೋದರಿ ಆತನಿಗೆ ರಾಕಿ ಕಟ್ಟಿದ್ದಳು. ಈತನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪರೀಕ್ಷೆ ಬಳಿಕ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಕುರಿತು ಮಾತನಾಡಿರುವ ಜಿಲ್ಲಾಧಿಕಾರಿ ಅರವಿಂದ್ ಪೋಸ್ವಾಲ್, ಸೋಮವಾರ ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಮೃತಪಟ್ಟಿದ್ದಾನೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಜಿಲ್ಲಾ ಆಸ್ಪತ್ರೆಯ ಹೊರಗೆ ಭಾರೀ ಪೊಲೀಸ್ ನಿಯೋಜನೆ ಹಾಗೂ ನಗರದ ವಿವಿಧ ಭಾಗಗಳಲ್ಲಿ ಹೆಚ್ಚುವರಿ ಪಡೆಗಳನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.
ಆಗಸ್ಟ್ 16ರಂದು ಶಾಲೆಯಲ್ಲಿ ಮಧ್ಯಾಹ್ನ ಊಟಕ್ಕೆ ಹೊತ್ತಿನಲ್ಲಿ ಬಾಲಕರಿಬ್ಬರ ನಡುವೆ ಗಲಾಟೆಯಾಗಿದೆ. ಈ ವೇಳೆ ಮುಸ್ಲಿಂ ವಿದ್ಯಾರ್ಥಿ ತನ್ನ ಸಹಪಾಠಿಗೆ ಚಾಕುವಿನಿಂದ ತೊಡೆ ಭಾಗಕ್ಕೆ ಇರಿದಿದ್ದ. ಗಂಭಿರವಾಗಿ ಗಾಯಗೊಂಡಿದ್ದ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದಾದ ಬಳಿಕ ಜಿಲ್ಲೆಯಲ್ಲಿ ಉಂಟಾಗಿದ್ದ ಕೋಮುಸಂಘರ್ಷವನ್ನು ಹತೋಟಿಗೆ ತಂದಿರುವ ಪೊಲೀಸರು ವ್ಯಾಪಕ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದೆ. ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಿದ್ದಾರೆ. ಕಾನೂನಿನ ಸಂಘರ್ಷಕ್ಕೊಳಗಾದ ಬಾಲಕನನ್ನು ವಶಕ್ಕೆ ಪಡೆಯಲಾಗಿದ್ದು, ವಿಚಾರಣೆಗೆ ಒಳಪಡಿಸಲಾಗಿದೆ.