MANGALORE: ಕಾಡಿಗೆ ಕರೆದುಕೊಂಡು ಹೋಗಿ ಅಪ್ರಾಪ್ತೆಯ ಅತ್ಯಾಚಾರ- ಆರೋಪಿಗೆ 20 ವರ್ಷಗಳ ಕಠಿಣ ಶಿಕ್ಷೆ
ಮಂಗಳೂರು: ಕಾಡಿಗೆ ಕರೆದುಕೊಂಡು ಹೋಗಿ ಅಪ್ರಾಪ್ತೆಯ ಮೇಲೆ ಅತ್ಯಾಚಾರವೆಸಗಿರುವ ಆರೋಪ ಸಾಬೀತಾಗಿರುವ ಹಿನ್ನೆಲೆಯಲ್ಲಿ ಆರೋಪಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಎಫ್‌ಟಿಎಸ್‌ಸಿ-2 ಪೋಕ್ಸೊ ವಿಶೇಷ ನ್ಯಾಯಾಲಯ 20 ವರ್ಷಗಳ ಕಠಿಣ ಶಿಕ್ಷೆ ವಿಧಿಸಿದೆ.
ಬೆಳ್ತಂಗಡಿ ತಾಲೂಕು ಕೊಕ್ರಾಡಿಯ ಯೋಗೀಶ (26) ಶಿಕ್ಷೆಗೊಳಗಾದ ಅಪರಾಧಿ
2020ರಲ್ಲಿ ಆರೋಪಿ ಬಾಲಕಿಯನ್ನು ಪುಸಲಾಯಿಸಿ ಕಾಡು ಪ್ರದೇಶಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದನು. ಪರಿಣಾಮ ಬಾಲಕಿ ಗರ್ಭಿಣಿಯಾಗಿ ಹೆಣ್ಣು ಮಗುವಿಗೆ ಜನ್ಮವನ್ನು ನೀಡಿದ್ದಳು. ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಪೊಲೀಸ್ ವೃತ್ತ ನಿರೀಕ್ಷಕ ಶಿವಕುಮಾರ್ ಬಿ. ತನಿಖೆ ನಡೆಸಿ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಪ್ರಕರಣವನ್ನು ಕೈಗೆತ್ತಿಕೊಂಡ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಎಫ್‌ಟಿಎಸ್‌ಸಿ-2 ಪೋಕ್ಸೊ ವಿಶೇಷ ನ್ಯಾಯಾಲಯ ವಿಚಾರಣೆ ನಡೆಸಿತ್ತು. 13 ಸಾಕ್ಷಿದಾರರನ್ನು ವಿಚಾರಿಸಿ 29 ದಾಖಲೆಗಳನ್ನು ಗುರುತಿಸಲಾಗಿತ್ತು. ಡಿಎನ್ಎ ವರದಿಗಳು, ಸಾಕ್ಷ್ಯ, ಪೂರಕ ಸಾಕ್ಷ್ಯಪರಿಗಣಿಸಿ ಹಾಗೂ ವಾದ ವಿವಾದ ಆಲಿಸಿದ ನ್ಯಾಯಾಲಯವು ಆರೋಪಿ ವಿರುದ್ಧ ಅಪರಾಧ ಸಾಬೀತಾಗಿದೆ ಎಂದು ತೀರ್ಮಾನಿಸಿದೆ.
ಆ.2 ರಂದು ನ್ಯಾಯಾಧೀಶರಾದ ಮಾನು ಕೆ.ಎಸ್.ಅವರು ಆರೋಪಿಗೆ ಭಾ.ದಂ.ಸಂ. ಕಲಂ 376(2)(ಎನ್) ಮತ್ತು ಕಲಂ 6 ಪೊಕ್ಸೊ ಕಾಯ್ದೆಯಂತೆ 20 ವರ್ಷಗಳ ಕಠಿಣ ಶಿಕ್ಷೆ ಮತ್ತು 50,000 ರೂ. ದಂಡ ವಿಧಿಸಿದ್ದಾರೆ. ದಂಡದ ಹಣವನ್ನು ನೊಂದ ಬಾಲಕಿಗೆ ಪಾವತಿಸುವಂತೆ ಆದೇಶಿಸಿದ್ದಾರೆ. ಅಲ್ಲದೆ ದಂಡ ಪ್ರಕ್ರಿಯೆ ಸಂಹಿತೆಯ ಕಲಂ 357 (ಎ) ಪ್ರಕಾರ ಮತ್ತು ಸಂತ್ರಸ್ತರ ಪರಿಹಾರ ಯೋಜನೆಯಡಿಯಲ್ಲಿ ನೊಂದ ನೊಂದ ಬಾಲಕಿಗೆ ಹೆಚ್ಚುವರಿಯಾಗಿ 1,50,000 ರೂ. ಹಾಗೂ ನೊಂದ ಬಾಲಕಿಯ ಮಗುವಿಗೆ 3 ಲಕ್ಷ ರೂ. ಪರಿಹಾರ ನೀಡುವಂತೆ ಕಾನೂನು ಸೇವಾ ಪ್ರಾಧಿಕಾರಕ್ಕೆ ನಿರ್ದೇಶನ ನೀಡಿದ್ದಾರೆ. ಸರಕಾರದ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ ಕೆ.ಬದರಿನಾಥ ನಾಯರಿ ವಾದಿಸಿದ್ದರು.